ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯ ಜವಾಬ್ದಾರಿ ಪ್ರತಿಯೊಬ್ಬ ಪ್ರಜೆ ಮೇಲಿದೆ : ಸಂಜೀವ ವಿ.ಕುಲಕರ್ಣಿ

ಕೊಪ್ಪಳ : ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ಜವಾಬ್ದಾರಿಯು ಪ್ರತಿಯೊಬ್ಬ ಭಾರತೀಯ ಪ್ರಜೆಗಳ ಮೇಲೆ ಕಾನೂನು ಬದ್ಧವಾಗಿದೆ ಎಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಂಜೀವ ವಿ.ಕುಲಕರ್ಣಿ ಅವರು ಹೇಳಿದರು.

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ವಕೀಲರ ಸಂಘ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಮಕ್ಕಳ ಸಹಾಯವಾಣಿ-1098, ಯುನೆಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಇವರ ಸಹಯೋಗದಲ್ಲಿ ಬುಧವಾರದಂದು ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದ ಶ್ರೇಯೋಭಿವೃದ್ಧಿಯಾಗಬೇಕಾದರೆ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆ ಅತ್ಯವಶ್ಯಕವಾಗಿದೆ. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದ ಮೇರೆಗೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಜೂನ್. 12 ರಂದು ಪ್ರತಿ ವರ್ಷ ಆಚರಿಸಲಾಗುತ್ತಿದ್ದು, ಮಕ್ಕಳು ಬಾಲಕಾರ್ಮಿಕತೆಗೆ ಒಳಪಡದಂತೆ ಹಾಗೂ ಅವರನ್ನು ಶಿಕ್ಷಣದತ್ತ ಕೊಂಡೋಯ್ಯುವುದು ಮತ್ತು ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗಾಗಿ 1986 ರಲ್ಲಿಯೇ ಕಾಯ್ದೆ ಜಾರಿಗೆ ಬಂದಿದ್ದರೂ ಸಹ ಹೋಟೆಲ್, ಗ್ಯಾರೇಜ್, ಇಟ್ಟಿಗೆ ಬಟ್ಟಿ ಹಾಗೂ ಇತರೇ ವ್ಯಾಪಾರ ಸಂಕೀರ್ಣಗಳಲ್ಲಿ ಬಾಲ ಕಾರ್ಮಿಕರು ಇಂದಿಗೂ ಕಂಡುಬರುತ್ತಿದ್ದಾರೆ. ಇದರಿಂದ ಕಾಯ್ದೆಯು ಸಂಪೂರ್ಣ ಬಳಕೆಯಾಗುತ್ತಿಲ್ಲ ಎಂಬುವುದು ತಿಳಿಯುತ್ತದೆ. ಇದ್ದಕ್ಕೆ ಮುಖ್ಯ ಕಾರಣ ಕಾನೂನು ಅರಿವು ಹಾಗೂ ಶಿಕ್ಷಣದ ಕೊರತೆ. ದೇಶದ ಅಭಿವೃದ್ಧಿಗಾಗಿ ಶಿಕ್ಷಣ ಬಹು ಮುಖ್ಯವಾಗಿದ್ದು, ಮಕ್ಕಳು ಒಳ್ಳೆಯ ಶಿಕ್ಷಣವನ್ನು ಕಲಿತು ಉತ್ತಮ ನಾಗರಿಕರಾಗಬೇಕು ಅಂದಾಗ ಮಾತ್ರ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯವಾಗಲಿದೆ.

ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾಯ್ದೆಗಳನ್ನು ಜಾರಿಗೊಳಿಸಿದ್ದು, ಬಾಲಕಾರ್ಮಿಕ ಮತ್ತು ಕಿಶೋರಾವಸ್ಥೆಯ ನಿಷೇಧ ಮತ್ತು ನಿಯಂತ್ರಣ ಕಾಯ್ದೆ-2016 ಜಾರಿಯಲ್ಲಿದೆ. 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಂಡಲ್ಲಿ 06 ತಿಂಗಳಿನಿಂದ 02 ವರ್ಷ ಜೈಲು ಹಾಗೂ 20 ರಿಂದ 50 ಸಾವಿರ ರೂ. ವರೆಗೆ ದಂಡ ವಿಧಿಸಲಾಗುವುದು. ಸಮಾಜದ ಶ್ರೇಯೋಭಿವೃದ್ಧಿಗಾಗಿ ಬಾಲಕಾರ್ಮಿಕ ಪದ್ಧತಿಯು ಮಾರಕವಾಗಿದ್ದು, ಈ ಅನಿಷ್ಠ ಪದ್ಧತಿಯನ್ನು ಬೇರಿನಿಂದ ಕಿತ್ತೋಗೆಯಬೇಕು. ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆ ಪ್ರತಿಯೊಬ್ಬ ಭಾರತೀಯ ನಾಗರೀಕರ ಆಧ್ಯ ಕರ್ತವ್ಯವಾಗಿದ್ದು, ಸಾರ್ವಜನಿಕರೆಲ್ಲರೂ ಸಹಕರಿಸಿ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಂಜೀವ ವಿ. ಕುಲಕರ್ಣಿ ಅವರು ಕರೆ ನೀಡಿದರು.

Leave a Reply

Your email address will not be published. Required fields are marked *